postviews: 8
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ 2025 ಜಂಬೂಸವಾರಿ ಅದ್ದೂರಿಯಾಗಿ ನೆರವೇರಿದೆ. ಇಂದು (ಗುರುವಾರ ಅ. 02) ಸಂಜೆ 4.42ರಿಂದ 5.06 ಅವಧಿಯ ಶುಭ ಕುಂಭ ಲಗ್ನದಲ್ಲಿ ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಸಿಎಂ ಜೊತೆ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀಕಾಂತ ರೆಡ್ಡಿ, ಪೊಲೀಸ್ ಆಯುಕ್ತೆ ಸೀಮಾಲಾಟ್ಕರ್ ಪುಷ್ಪಾರ್ಚನೆ ಮಾಡಿದರು.
ಅಲಂಕೃತಗೊಂಡ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿದ್ದ ನಾಡ ಅಧಿದೇವತೆ ಚಾಮುಂಡಿತಾಯಿಯನ್ನು ಹೊತ್ತು 6ನೇ ಬಾರಿ ಅಭಿಮನ್ಯು ರಾಜಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಿದ್ದಾನೆ.
ಅಂಬಾರಿಯಲ್ಲಿ ವಿರಾಜಮಾನಳಾಗಿದ್ದ ಚಾಮುಂಡಿತಾಯಿಯನ್ನು ಕಣ್ತುಂಬಿಕೊಂಡು ಜನರು ಧನ್ಯತಾ ಭಾವ ಮೆರೆದರು. ದಸರಾ ಜಂಬೂಸವಾರಿ ವೀಕ್ಷಿಸಲು ಅರಮನೆ ಅಂಗಳದಲ್ಲಿ 48 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿತ್ತು. ಇದನ್ನೂ ಓದಿ: ಬೆಂಗಳೂರು ಕೇಂದ್ರ ನಗರ ಪಾಲಿಕೆಯಲ್ಲಿ ಗಾಂಧೀ ಜಯಂತಿ ಆಚರಣೆ
ದಸರಾ ಜಂಬೂಸವಾರಿಗೆ ಸ್ತಬ್ಧಚಿತ್ರ ಹಾಗೂ ವಿವಿಧ ಕಲಾತಂಡಗಳು ಮೆರುಗು ನೀಡುತ್ತಿವೆ. ಒಟ್ಟು 57 ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿವೆ. ಮೆರವಣಿಗೆಯಲ್ಲಿ ಸಾಗುವ ದಾರಿಯಲ್ಲಿ 140ಕ್ಕೂ ಹೆಚ್ಚು ಕಲಾ ತಂಡಗಳು ಭಾಗಿಯಾಗಿವೆ.

